ಹುಬ್ಬಳ್ಳಿ:
ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದಿರುವ ಕೆಲ ಪ್ರಕರಣಗಳ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿಂಧೂರ್ ಅವರ ನೇತೃತ್ವದಲ್ಲಿ ವಿಶೇಷ ಜಾಗೃತಿ ಅಭಿಯಾನ ನಡೆಸಲಾಯಿತು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಇನ್ಸ್ಪೆಕ್ಟರ್ ಸಿಂಧೂರ್, ತಮ್ಮ ಪ್ರದೇಶದಲ್ಲಿ ಯಾವುದೇ ಅಪರಿಚಿತ ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿರುವುದು ಕಂಡುಬಂದರೆ ಅವರನ್ನು ವಿಚಾರಿಸುವುದು ಅಥವಾ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು. ಹಿಂದೆ ನಡೆದಿರುವ ದುರ್ಘಟನೆಗಳನ್ನು ಮನದಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕು ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ತಿಳಿಸಿದರು. ಅಲ್ಲದೆ, ಇಂತಹ ಅಪರಾಧಗಳನ್ನು ತಡೆಗಟ್ಟುವುದು ಪೊಲೀಸರ ಜವಾಬ್ದಾರಿ ಮಾತ್ರವಲ್ಲ, ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯವಾಗಿದೆ. ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಿದ್ದು, ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಕೂಡಲೇ ಮಾಹಿತಿ ನೀಡಿದರೆ ಇಂತಹ ಘಟನೆಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ಹೇಳಿದರು. ಹಳೆ ಹುಬ್ಬಳ್ಳಿ ಭಾಗದಲ್ಲಿ ಮಕ್ಕಳ ಸುರಕ್ಷತೆಗೆ ಕೈಗೊಂಡಿರುವ ಈ ಮುನ್ನೆಚ್ಚರಿಕಾ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಪೊಲೀಸರ ಈ ಜಾಗೃತಿ ಅಭಿಯಾನಕ್ಕೆ ಸ್ಥಳೀಯರು ಸಹಕಾರ ವ್ಯಕ್ತಪಡಿಸಿದ್ದಾರೆ

