ಹುಬ್ಬಳ್ಳಿ: ಸಮಾಜಸೇವಕ ಹಾಗೂ ಬಿ.ಎ.ಕೆ. (ವೆಂಕಟೇಶ್ ಅಶೋಕ ಕಾಟವೆ) ಫೌಂಡೇಶನ್ ಸಂಸ್ಥಾಪಕ ವೆಂಕಟೇಶ್ ಅಶೋಕ ಕಾಟವೆ ಅವರ ಹುಟ್ಟುಹಬ್ಬದ ಅಂಗವಾಗಿ ಜುಲೈ 29ರಂದು ಹುಬ್ಬಳ್ಳಿಯ ದಾಜೀಬಾನಪೇಟೆಯ ಶ್ರೀ ದುರ್ಗಾದೇವಿ ಕಲ್ಯಾಣ ಮಂಟಪದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಕೆ.ಎಲ್.ಇ. ಜಗದ್ಗುರು ಗಂಗಾಧರ ಮಹಾಸ್ವಾಮಿಗಳು ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ, ಕೆ.ಎಲ್.ಇ. ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ, ಗಬ್ಬೂರು, ರಾಷ್ಟೋತ್ಥಾನ ರಕ್ತ ಕೇಂದ್ರ ಹಾಗೂ ಇತರೆ ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿರುವ ಈ ಶಿಬಿರವು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಶಿಬಿರದಲ್ಲಿ ಶಸ್ತ್ರಚಿಕಿತ್ಸೆ, ಪ್ರಸೂತಿ ಮತ್ತು ಸ್ತ್ರೀರೋಗ, ಮಕ್ಕಳ ಆರೋಗ್ಯ ಸೇರಿದಂತೆ ವಿವಿಧ ವಿಭಾಗಗಳ ತಜ್ಞ ವೈದ್ಯರು ಸಾರ್ವಜನಿಕರ ಉಚಿತ ಆರೋಗ್ಯ ತಪಾಸಣೆ ನಡೆಸಲಿದ್ದು, ಅಗತ್ಯ ಔಷಧಿಗಳನ್ನು ಉಚಿತವಾಗಿ ವಿತರಿಸಲಿದ್ದಾರೆ. ಜೊತೆಗೆ ಅಪೆಂಡಿಕ್ಸ್, ಕಣ್ಣಿನ ಪೊರೆ, ಹರ್ನಿಯಾ, ಪೈಲ್ಸ್, ಮೂಳೆ ಶಸ್ತ್ರಚಿಕಿತ್ಸೆ ಸೇರಿದಂತೆ ವಿವಿಧ ಚಿಕಿತ್ಸೆಗಳು ಹಾಗೂ ಶಸ್ತ್ರಚಿಕಿತ್ಸೆಗಳಿಗೆ ಶೇ.70ರವರೆಗೆ ವಿಶೇಷ ರಿಯಾಯಿತಿ ನೀಡಲಾಗುತ್ತದೆ. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ವೀರಯೋಧರು, ಪದ್ಮಶ್ರೀ ಪುರಸ್ಕೃತರು, ಅಥ್ಲೀಟ್ಗಳು ಹಾಗೂ ಪೌರಕಾರ್ಮಿಕರನ್ನು ಸನ್ಮಾನಿಸುವ ಕಾರ್ಯಕ್ರಮವೂ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದ ಪ್ರಹ್ಲಾದ ಜೋಶಿ ಉದ್ಘಾಟಿಸಲಿದ್ದು, ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ್ ಟೆಂಗಿನಕಾಯಿ, ಸೇರಿದಂತೆ ಹಲವಾರು ಜನಪ್ರತಿನಿಧಿಗಳು, ಗಣ್ಯರು ಹಾಗೂ ಮಠಾಧೀಶರು ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ಪಾಲ್ಗೊಳ್ಳಲು ಬಯಸುವ ಸಾರ್ವಜನಿಕರು ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು ಎಂದು ಆಯೋಜಕರು ತಿಳಿಸಿದ್ದಾರೆ.

