ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ಮತ್ತೆ ಕಳ್ಳರ ಅಟ್ಟಹಾಸ: ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯ, ಪೊಲೀಸರ ಕಾರ್ಯವೈಖರಿ ಪ್ರಶ್ನೆ
ಹುಬ್ಬಳ್ಳಿ: ಹುಬ್ಬಳ್ಳಿಯ ಗೋಕುಲ್ ರಸ್ತೆ ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಕಳೆದ ಕೆಲವು ದಿನಗಳಿಂದ ಗಿರಿನಗರ ಪ್ರದೇಶದಲ್ಲಿ ಮನೆಗಳ ಬಾಗಿಲು ಮುರಿದು ಚಿನ್ನಾಭರಣ, ದ್ವಿಚಕ್ರ ವಾಹನ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಈ ಪ್ರಕರಣಗಳ ಕುರಿತು ಮಾಧ್ಯಮಗಳಲ್ಲಿ ವರದಿಗಳೂ ಪ್ರಸಾರವಾಗಿದ್ದರೂ, ಕಳ್ಳರ ಕೃತ್ಯಗಳಿಗೆ ಕಡಿವಾಣ ಬೀಳದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಇದೀಗ ಮತ್ತೊಮ್ಮೆ ಸೋಮವಾರ ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಕಳ್ಳರು ಮನೆಯೊಂದಕ್ಕೆ ಕನ್ನ ಹಾಕಿರುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆಗಳ ಸರಣಿ ಮುಂದುವರಿದ ಹಿನ್ನೆಲೆಯಲ್ಲಿ ಗೋಕುಲ್ ಠಾಣೆ ಪೊಲೀಸರ ಕಾರ್ಯವೈಖರಿ ಬಗ್ಗೆ ಸ್ಥಳೀಯರು ಪ್ರಶ್ನೆ ಎತ್ತಿದ್ದು, ರಾತ್ರಿ ಗಸ್ತು ಹಾಗೂ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವಂತೆ ಆಗ್ರಹಿಸಿದ್ದಾರೆ. ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಿಸಿ ಕ್ಯಾಮೆರಾ ದೃಶ್ಯಗಳ ಆಧಾರದಲ್ಲಿ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಸಾರ್ವಜನಿಕರ ಆತಂಕ ದೂರ ಮಾಡುವಂತೆ ಸ್ಥಳೀಯರು ಗೋಕುಲ್ ಠಾಣೆ ಪೊಲೀಸರಿಗೆ ಮನವಿ ಮಾಡಿದ್ದಾರೆ

