ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದ ಬಳಿ ವಿಂಡ್ ಮಿಲ್ ಕಂಪನಿಯ ಸಿಬ್ಬಂದಿ ಹಾಗೂ ರೈತರ ನಡುವೆ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಹೈಟೆನ್ಷನ್ ವೈಯರ್ ಅಳವಡಿಕೆ ವೇಳೆ ರೈತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ರೈತರು ಕುಷ್ಟಗಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಭೂಮಿಗೆ ಇನ್ನೂ ಸಮರ್ಪಕ ಪರಿಹಾರ ನೀಡಿಲ್ಲ ಎಂದು ಕೆಲಸವನ್ನು ತಡೆಯಲು ತೆರಳಿದ್ದ ರೈತರ ಮೇಲೆ ಕಂಪನಿ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ಗುಂಪು ಕಟ್ಟಿಕೊಂಡು ದೊಣ್ಣೆಗಳಿಂದ ಹಲ್ಲೆ ನಡೆಸಿ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಘಟನೆಯ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ರೈತರು ಒತ್ತಾಯಿಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಸ್ಥಳೀಯ ರೈತರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ

