ಹುಬ್ಬಳ್ಳಿ, ಜು.31: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ಅಭಿವೃದ್ಧಿ ವಿಚಾರವನ್ನು ಮುಂದಿಟ್ಟುಕೊಂಡು ಆಡಳಿತ ಪಕ್ಷ ಬಿಜೆಪಿ ಹಾಗೂ ವಿರೋಧ ಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆಯಿತು. ಕೆಲಕಾಲ ಸಭೆಯಲ್ಲಿ ಗದ್ದಲದ ವಾತಾವರಣ ನಿರ್ಮಾಣಗೊಂಡು, ಸದಸ್ಯರು ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದರು. ಸಭೆಯಲ್ಲಿ ರಾಜ್ಯ ಸರ್ಕಾರದ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಬಿಜೆಪಿ ಸದಸ್ಯರು ಆರೋಪಿಸಿದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು, ಬಿಜೆಪಿ ಆಡಳಿತದ ಅವಧಿಯಲ್ಲಿ ಯಾವ ರೀತಿಯ ಅಭಿವೃದ್ಧಿ ಮಾಡಲಾಗಿದೆ ಎಂಬುದನ್ನು ಮೊದಲು ತಿಳಿಸಬೇಕು ಎಂದು ಪ್ರತಿಕ್ರಿಯಿಸಿದರು. ಚರ್ಚೆ ತಾರಕಕ್ಕೇರಿದ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಕಾಂಗ್ರೆಸ್ ಅನ್ನು “ಕಾಕ್ರೋಚ್ ಪಾರ್ಟಿ” ಎಂದು ಉಲ್ಲೇಖಿಸಿದ್ದಾಗಿ ಹೇಳಲಾಗಿದ್ದು, ಇದರಿಂದ ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಉಭಯ ಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ತೀವ್ರಗೊಂಡು, ಕೆಲಕಾಲ ಕೈಕೈ ಮಿಲಾಯಿಸುವ ಹಂತಕ್ಕೂ ಪರಿಸ್ಥಿತಿ ತಲುಪಿತು. ಸಭೆಯಲ್ಲಿದ್ದ ಹಿರಿಯ ಸದಸ್ಯರು ಹಾಗೂ ಅಧಿಕಾರಿಗಳು ಮಧ್ಯಪ್ರವೇಶಿಸಿ ಸದಸ್ಯರನ್ನು ಸಮಾಧಾನಪಡಿಸಿದ ಬಳಿಕ ಸಭೆಯ ಕಲಾಪವನ್ನು ಮುಂದುವರಿಸಲಾಯಿತು. ಘಟನೆ ಕೆಲಕಾಲ ಸಭೆಯ ವಾತಾವರಣವನ್ನು ಉದ್ವಿಗ್ನಗೊಳಿಸಿತು.

