ಮಹೇಬೂಬ ನಗರದಲ್ಲಿ L&T ವಿರುದ್ಧ ಆಕ್ರೋಶ ವಿದ್ಯಾಕಾಶಿ ಧಾರವಾಡದಲ್ಲಿ ಎಲ್ & ಟಿ (L&T) ಕಂಪನಿಯ ವಿರುದ್ಧ ಮಹೇಬೂಬ ನಗರ ನಿವಾಸಿಗಳ ಆಕ್ರೋಶ ಭುಗಿಲೆದ್ದಿದೆ. ಧಾರವಾಡದ ಮಹೇಬೂಬ ನಗರ ಮುಖ್ಯರಸ್ತೆಯಲ್ಲಿ ಎಲ್ & ಟಿ ಸಿಬ್ಬಂದಿ ಪದೇ ಪದೇ ರಸ್ತೆ ಅಗೆದು ಕಾಮಗಾರಿ ನಡೆಸುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ರಸ್ತೆಗಳಲ್ಲಿ ನಿರ್ಮಾಣವಾಗಿರುವ ಆಳವಾದ ಗುಂಡಿಗಳಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಹಾಗೂ ದ್ವಿಚಕ್ರ ವಾಹನ ಸವಾರರು ನಿತ್ಯ ಅಪಾಯದ ನಡುವೆ ಓಡಾಡಬೇಕಾದ ಸ್ಥಿತಿ ಎದುರಾಗಿದೆ. ಬಸ್ ಸೇರಿದಂತೆ ಇತರೆ ವಾಹನಗಳ ಸಂಚಾರಕ್ಕೂ ತೀವ್ರ ಅಡಚಣೆ ಉಂಟಾಗಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ಮನೆಮಾಡಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಮಹೇಬೂಬ ನಗರ ನಿವಾಸಿಗಳು ಎಲ್ & ಟಿ ಕಾಮಗಾರಿಯನ್ನು ತಡೆದು ಪ್ರತಿಭಟನೆ ನಡೆಸಿದರು. ರಸ್ತೆ ಕಾಮಗಾರಿಯನ್ನು ಸುರಕ್ಷಿತವಾಗಿ ಹಾಗೂ ಶೀಘ್ರವಾಗಿ ಪೂರ್ಣಗೊಳಿಸಬೇಕು, ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟವಾಡಬಾರದು ಎಂದು ಸ್ಥಳೀಯರು ಆಗ್ರಹಿಸಿದರು. ಕಾಮಗಾರಿ ವಿಳಂಬವಾದರೆ ಹಾಗೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.

