ಬ್ರೇಕಿಂಗ್ ನ್ಯೂಸ್ | ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ಹುಬ್ಬಳ್ಳಿಯಲ್ಲಿ ಅಬ್ಬಯ್ಯ ಬೆಂಬಲಿಗರ ಆಕ್ರೋಶ ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಹಾಗೂ ಅಭಿಮಾನಿಗಳು ಹುಬ್ಬಳ್ಳಿಯ ಇಂಡಿ ಪಂಪ್ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಟೈರ್ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ಹೊರಹಾಕಿದರು. ಇದೇ ವೇಳೆ, ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಬಸ್ಗೆ ಕಲ್ಲು ತೂರಾಟ ನಡೆದಿದ್ದು, ಬಸ್ಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು, ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಭದ್ರತೆ ಹೆಚ್ಚಿಸಿದರು.

