21ನೇ ಶತಮಾನದಲ್ಲಿ ಬದುಕುತ್ತಿದ್ದರೂ ದಲಿತರ ಮೇಲಿನ ದೌರ್ಜನ್ಯ ಇನ್ನೂ ನಿಂತಿಲ್ಲ ಎನ್ನುವುದಕ್ಕೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲ್ಲೂಕಿನ ಬೆಳಗಿರಿ ಗ್ರಾಮದಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಅಜ್ಜೆ ಹಬ್ಬದ ಪ್ರಯುಕ್ತ ದೊಡ್ಡಸ್ವಾಮಿ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ಐವರು ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ ಅಸ್ಪೃಶ್ಯತೆ ಆಚರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಮಾನವೀಯ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ವಿಮೋಚನಾ ಸಮಿತಿಯ ಅಣ್ಣಿಗೇರಿ ಹಾಗೂ ಕಲಘಟಗಿ ತಾಲ್ಲೂಕು ಸಮಿತಿಗಳ ವತಿಯಿಂದ ಪ್ರತಿಭಟನೆ ನಡೆಸಿ, ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ತಪ್ಪಿತಸ್ಥರ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ನೀಡಿದ್ದರೂ, ಜಾತಿಯ ಹೆಸರಿನಲ್ಲಿ ನಡೆಯುತ್ತಿರುವ ಇಂತಹ ಘಟನೆಗಳು ಸಮಾಜವನ್ನು ತಲೆತಗ್ಗಿಸುವಂತಿವೆ. ದಲಿತರ ಮೇಲಿನ ಶೋಷಣೆ ಇನ್ನೂ ಸಂಪೂರ್ಣವಾಗಿ ಅಂತ್ಯಗೊಂಡಿಲ್ಲ ಎಂಬ ಕಹಿ ಸತ್ಯವನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.

