ಹುಬ್ಬಳ್ಳಿ : ಹುಬ್ಬಳ್ಳಿ ನಗರದ ಸಮಗ್ರ ಅಭಿವೃದ್ಧಿಗೆ ಹಣಕಾಸಿನ ಕೊರತೆ ಇದ್ದರೂ, ಶೀಘ್ರದಲ್ಲೇ ಉತ್ತಮ ಯೋಜನೆಯನ್ನು ರೂಪಿಸಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಲ್ಲಿ ತಾವು ಅತೀ ಹೆಚ್ಚು ಬಾರಿ ನಗರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ ಎಂದರು. ನಗರದ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ನಿರಂತರ ಸಭೆ ನಡೆಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಬಿಆರ್ಟಿಎಸ್ (BRTS) ಯೋಜನೆಯಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂಬುದು ಸರ್ಕಾರದ ಗಮನದಲ್ಲಿದೆ. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿದು, ನಗರದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ ಲಾಡ್ ಭರವಸೆ ನೀಡಿದರು.

