ಧಾರವಾಡ: ಆದಿವಾಸಿ ಪಾರಿ ಹರಣಶಿಕಾರಿ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 32ನೇ ವಿಶ್ವ ಆದಿವಾಸಿ ದಿನಾಚರಣೆಯ ಅಂಗವಾಗಿ ಆಗಸ್ಟ್ 9ರಂದು ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವಿಶ್ವ ಆದಿವಾಸಿ ದಿನಾಚರಣೆ, ಆದಿವಾಸಿ ಬುಡಕಟ್ಟು ಕಲಾಮೇಳ ಹಾಗೂ ಆದಿವಾಸಿ ಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಯುಕ್ತ ರಾಷ್ಟ್ರ ಸಂಸ್ಥೆ (United Nations) ಘೋಷಿಸಿರುವ ವಿಶ್ವ ಆದಿವಾಸಿ ದಿನಾಚರಣೆಯ ಅಂಗವಾಗಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕದ 49ಕ್ಕೂ ಹೆಚ್ಚು ಆದಿವಾಸಿ ಸಮುದಾಯಗಳ ಸಂಸ್ಕೃತಿ, ಪರಂಪರೆ, ಭಾಷೆ, ಜೀವನ ಪದ್ಧತಿ ಹಾಗೂ ಹಕ್ಕುಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಆದಿವಾಸಿ ಸಮುದಾಯದ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಶಿಕ್ಷಣ, ಆರೋಗ್ಯ, ಉದ್ಯೋಗ, ಅರಣ್ಯ ಹಕ್ಕು, ಭೂಹಕ್ಕು ಹಾಗೂ ಸಾಮಾಜಿಕ ನ್ಯಾಯ ಕುರಿತ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಆದಿವಾಸಿ ಸಾಂಸ್ಕೃತಿಕ ಪ್ರದರ್ಶನಗಳು, ಬುಡಕಟ್ಟು ಕಲಾಮೇಳ, ಸಾಂಪ್ರದಾಯಿಕ ನೃತ್ಯಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಆದಿವಾಸಿ ಸೂಲಗಿತ್ತಿಯರಿಗೆ “ಆದಿವಾಸಿ ಸಿರಿ ಪ್ರಶಸ್ತಿ” ಪ್ರದಾನ ಮಾಡಲಾಗುವುದು ಎಂದು ಸಂಘದ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

