ಹುಬ್ಬಳ್ಳಿ : ಆಸಾರ ಓಣಿ ರಸ್ತೆ ಹಾಗೂ ದೇವಸ್ಥಾನದ ಜಾಗಕ್ಕೆ ಸಂಬಂಧಿಸಿದ ವಿವಾದ ಇದೀಗ ಮತ್ತಷ್ಟು ತೀವ್ರಗೊಂಡಿದ್ದು, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಪುರಾತತ್ವ ಇಲಾಖೆ ಹಾಗೂ ಮಹಾನಗರ ಪಾಲಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇವಸ್ಥಾನದ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಾಣವಾಗಲಿ ಅಥವಾ ಯಾವುದೇ ರೀತಿಯ ಚಟುವಟಿಕೆ ನಡೆಯಬಾರದು. ದೇವಸ್ಥಾನದ ಸುತ್ತ 100 ಮೀಟರ್ ವ್ಯಾಪ್ತಿಗೆ ತಂತಿ ಬೇಲಿ ನಿರ್ಮಿಸಿ ಸ್ಥಳವನ್ನು ಸಂರಕ್ಷಿಸಬೇಕು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ಅಲ್ಲದೇ, ದೇವಸ್ಥಾನದ ಆವರಣದಲ್ಲಿ ಈ ಹಿಂದೆ ಪುಷ್ಕರಣಿ ಇದ್ದದ್ದು ಸತ್ಯವಾಗಿದ್ದು, ಅದನ್ನು ಮರುಸ್ಥಾಪಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಈ ವಿಚಾರದಲ್ಲಿ ಪುರಾತತ್ವ ಇಲಾಖೆ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ವಿರುದ್ಧ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇನ್ನು ರಸ್ತೆ ನಿರ್ಮಾಣ ವಿಚಾರವಾಗಿ ಸ್ಥಳೀಯ ಕಾರ್ಪೊರೇಟರ್ಗೆ ಸಂಬಂಧವಿಲ್ಲ ಎಂದು ಹೇಳಿದ ಮುತಾಲಿಕ್, ದೇವಸ್ಥಾನದ ಮುಂಭಾಗದಲ್ಲಿ ರಸ್ತೆ ನಿರ್ಮಿಸುವ ಸಂದರ್ಭದಲ್ಲಿ ಪುರಾತತ್ವ ಇಲಾಖೆಗೆ ಯಾವುದೇ ನೋಟಿಸ್ ನೀಡಲಾಗಿತ್ತೇ? ಎಂದು ಪ್ರಶ್ನಿಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸಾರ ಓಣಿ ವಿವಾದ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಈ ವಿಚಾರ ಯಾವ ರೂಪ ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

